ಸುದ್ದಿ

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: 72 ಚಾಲಕರ ವಿರುದ್ಧ ಎಫ್ಐಆರ್

Share It

ಬೆಂಗಳೂರು: ಮದ್ಯ ಸೇವಿಸಿ  ಶಾಲಾ
ವಾಹನಗಳನ್ನು ಚಾಲನೆ ಮಾಡುತ್ತಿರುವ ಚಾಲಕರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟು 72 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳ ತಪಾಸಣೆ ನಡೆಸಲಾಗಿದೆ ಎಂದು ನಗರದ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.

ಆಗಸ್ಟ್‌ 5ರಂದು ನಡೆಸಿದ ಕಾರ್ಯಾಚರಣೆಯಲ್ಲಿ 26 ಸ್ಕೂಲ್ ಬಸ್ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮದ್ಯಪಾನ ಮಾಡಿ ಶಾಲಾ ಬಸ್ ಚಲಾಯಿಸುವ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

ಒಂದು ತಿಂಗಳ ಹಿಂದೆ ನಡೆದಿದ್ದ ಕಾರ್ಯಾಚರಣೆಯಲ್ಲಿ 23 ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸಿ ಸಿಕ್ಕಿಬಿದ್ದಿದ್ದರು. ಈ ವರ್ಷ ಇಲ್ಲಿಯವರೆಗೆ ಒಟ್ಟು 72 ಚಾಲಕರ ಮೇಲೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಇದು ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಶಾಲಾ ಬಸ್‌ಗಳಲ್ಲಿ ಸಹಾಯಕರನ್ನು ನೇಮಿಸುವುದು ಮತ್ತು ಬಸ್‌ಗಳ ಒಳಗೆ ಕಡ್ಡಾಯವಾಗಿ ಸಿಸಿಟಿವಿಗಳನ್ನು ಅಳವಡಿಸುವುದು ಅತ್ಯಗತ್ಯ. ಪ್ರಕರಣ ದಾಖಲಿಸಿರುವ ಚಾಲಕರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 185 ರ ಅಡಿಯಲ್ಲಿ ಆರೋಪ ಹೊರಿಸಲಾಗಿದ್ದು, ಅವರ ಚಾಲನಾ ಪರವಾನಗಿಗಳನ್ನು ಅಮಾನತುಗೊಳಿಸಲು ಆಯಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Share It

You cannot copy content of this page