ಬೆಂಗಳೂರು– ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ದೂರುದಾರರಾದ ಮಮತಾ ಸಿಂಗ್ (ಮಾಜಿ ಸಿಎಂ ಬಿಎಸ್ವೈ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ) ಸಲ್ಲಿಸಿದ್ದ ಖಾಸಗಿ ದೂರಿನ ಮೇರೆಗೆ ತನಿಖೆಗೆ ಅನುಮತಿ ನೀಡಿದ್ದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹಾಗೂ ಅದನ್ನು ರದ್ದುಪಡಿಸುವಂತೆ ಕೋರಿ ಅಲೋಕ್ ಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿದಾರ ಅಧಿಕಾರಿ ವಿರುದ್ಧ ನಗರದ 37 ಎಸಿಎಂಎಂ ಕೋರ್ಟ್ ನಡೆಸುತ್ತಿದ್ದ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಸಕ್ಷಮ ಪ್ರಾಧಿಕಾರದಿಂದ ಅನುಮತಿ ಇಲ್ಲದೇ ಪ್ರಾಸಿಕ್ಯೂಷನ್ ಗೆ ಒಳಪಡಿಸಲು ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 195ರ ಅಡಿ ಅವಕಾಶವಿಲ್ಲ. ಇದರ ಹೊರತಾಗಿ ವಿಚಾರಣಾ ನ್ಯಾಯಾಲಯವು ಸಂಜ್ಞೇಯ ಅಪರಾಧವೆಂದು ಪರಿಗಣಿಸಿ ಪ್ರಾಸಿಕ್ಯೂಷನ್ ನಡೆಸಲು ಅನುಮತಿಸಿರುವುದು ಸೂಕ್ತವಲ್ಲ. ಇನ್ನು ದೂರುದಾರರಾದ ಮಮತಾ ಸಿಂಗ್ ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ವಾದ ಪರಿಗಣಿಸಿದ ಹೈಕೋರ್ಟ್ ಅರ್ಜಿದಾರ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ: ತಮ್ಮ ಪುತ್ರಿಗೆ ಸಂಬಂಧಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಮಮತಾ ಸಿಂಗ್ ನೀಡಿದ ದೂರು ಆಧರಿಸಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಈ ದೂರು ಹಿಂಪಡೆಯುವಂತೆ ಸಿಸ್ಟರ್ ಶಾಲಿನಿ ಎಂಬುವರು ಬೆದರಿಕೆ ಹಾಕಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಂಬಂಧಪಟ್ಟ ಪೊಲೀಸರಿಗೆ ಸೂಚಿಸುವಂತೆ ಕೋರಿ ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರಿಗೆ ದೂರು ನೀಡಲಾಗಿತ್ತು.
ಈ ವಿಚಾರವಾಗಿ ಸಾಕಷ್ಟು ಬಾರಿ ಸಂಪರ್ಕಿಸಿದ್ದರೂ ಅಲೋಕ್ ಕುಮಾರ್ ಸಂಬಂಧಪಟ್ಟ ಪೊಲೀಸರಿಗೆ ದೂರು ದಾಖಲಿಸಲು ಸೂಚಿಸಲಿಲ್ಲ. ಬದಲಿಗೆ ತನಗೆ ಆಲೋಕ್ ಕುಮಾರ್ ಹಾಗೂ ಇತರೆ ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಮಮತಾ ಸಿಂಗ್ ಅವರು ಎಸಿಎಂಎಂ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ದೂರಿನ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ಅಲೋಕ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 34, 120ಎ, 166ಎ, 323, 325, 351 ಮತ್ತು 506 ಅಡಿ ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು. ವಿಚಾರಣಾ ನ್ಯಾಯಾಲಯದ ಈ ಆದೇಶ ರದ್ದು ಕೋರಿ ಅಲೋಕ್ ಹೈಕೋರ್ಟ್ ಮೊರೆ ಹೋಗಿದ್ದರು.
(WP 28964/2023)
ಮೂಲ Law Time