ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸಮ್ಮತಿ ನೀಡಿ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶವನ್ನು ಈಗಿನ ಸರ್ಕಾರ ಹಿಂಪಡೆದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು,
ಈ ಆರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ನ್ಯಾ.ಉಮೇಶ್ ಎಂ ಅವರಿದ್ದ ಪೀಠ ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.
2019ರಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಅಂದಿನ ಬಿಜೆಪಿ ಸರ್ಕಾರ ಅನುಮತಿ ನೀಡಿತ್ತು. ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಪ್ರಶ್ನಿಸಿ ಈ ಮೊದಲು ಡಿಕೆ ಶಿವಕುಮಾರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತ್ತು.
ಇದರ ನಡುವೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ರದ್ದುಪಡಿಸಿ ಆದೇಶಿಸಿತ್ತು. ಸರ್ಕಾರದ ಈ ಆದೇಶ ಪ್ರಶ್ನಿಸಿ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಗೆ ರಿಟ್ ಸಲ್ಲಿಸಿದ್ದಾರೆ. ಜತೆಗೆ, ಸಿಬಿಐ ಕೂಡ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದೆ.