ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ತಮ್ಮ ಕುಟುಂಬ ಸದಸ್ಯರ ಹೆಸರಿಗೆ ಅಕ್ರಮವಾಗಿ ನಿವೇಶನಗಳನ್ನು ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಿದೆ.
ಹೈಕೋರ್ಟ್ ತೀರ್ಪು: ಪ್ರಕರಣ ಸಂಬಂಧ ದೂರುದಾರರು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 ಎ ಅಡಿ ದೂರು ದಾಖಲಿಸಲು ಮತ್ತು ರಾಜ್ಯಪಾಲರಿಂದ ಅನುಮೋದನೆ ಪಡೆಯಲು ಅರ್ಹರಿದ್ದಾರೆ. ಖಾಸಗಿ ದೂರುದಾರರು ಕೂಡ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 ಎ ಅಡಿಯಲ್ಲಿ ಅನುಮೋದನೆ ಕೋರಬಹುದಾಗಿದೆ.
ಸಚಿವ ಸಂಪುಟದ ಶಿಫಾರಸ್ಸನ್ನು ರಾಜ್ಯಪಾಲರು ತಿರಸ್ಕರಿಸಿರುವದಲ್ಲಿ ಲೋಪವಿಲ್ಲ. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿಯೇ ತೀರ್ಮಾನ ಕೈಗೊಂಡಿದ್ದಾರೆ. ಮುಖ್ಯಮಂತ್ರಿಗಳ ಕುಟುಂಬ ಸದಸ್ಯರು ಈ ಪ್ರಕರಣದಲ್ಲಿ ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ರಾಜ್ಯಪಾಲರು ಸಾಮಾನ್ಯ ಸಂದರ್ಭಗಳಲ್ಲಿ ಸಂವಿಧಾನದ ವಿಧಿ 163 ಅಡಿಯಲ್ಲಿ ಸಚಿವ ಸಂಪುಟದ ಸಲಹೆಗಳನ್ನು ಪಡೆಯಬಹುದಾಗಿದೆ. ಈ ಪ್ರಸ್ತುತ ಪ್ರಕರಣದಲ್ಲಿ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ. ಅದರಲ್ಲಿ ಯಾವುದೇ ರೀತಿಯ ತಪ್ಪುಗಳಾಗಿಲ್ಲ.
ದೂರಿನಲ್ಲಿರುವ ಅಂಶಗಳನ್ನು ಪರಿಶೀಲಿಸಿದಾಗ ಈ ಪ್ರಕರಣದಲ್ಲಿ ಸಂಶಯವಿಲ್ಲದೆಯೇ ತನಿಖೆ ನಡೆಸುವ ಅಗತ್ಯವಿದೆ. ಅಲ್ಲದೆ, ಅರ್ಜಿಯಲ್ಲಿ ವಿವರಿಸಲಾದ ಸಂಗತಿಗಳ ಬಗ್ಗೆ ತನಿಖೆ ಅವಶ್ಯವಿದ್ದು, ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ ಎಂದು ಹೈಕೋರ್ಟ್ ಹೇಳಿದೆ.
ಹೈಕೋರ್ಟ್ ನ ತೀರ್ಪಿನಿಂದಾಗಿ ಜನಪ್ರತಿನಿಧಿಗಳ ವಿರುದ್ಧದ ವಿಚಾರಣಾ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ನ್ಯಾಯಿಕ ಪ್ರಕ್ರಿಯೆಗೆ ಇದ್ದ ಮಧ್ಯಂತರ ತಡೆ ತೆರವಾಗಿದೆ.