ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.
ಸಿದ್ದರಾಮಯ್ಯ ಅವರ ಕುಟುಂಬವು ಅಧಿಕಾರ ದುರುಪಯೋಗಪಡಿಸಿಕೊಂಡು ಮುಡಾದಿಂದ ಅಕ್ರಮವಾಗಿ ನಿವೇಶನಗಳನ್ನು ಪಡೆದಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್, ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಸೂಚಿಸಿತ್ತು.
ಅಕ್ರಮವಾಗಿ ನಿವೇಶನಗಳನ್ನು ಪಡೆದ ಆರೋಪದ ಮೇಲೆ ಸಿದ್ದರಾಮಯ್ಯ, ಪತ್ನಿ ಬಿ.ಎಂ. ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನಿನ ಮಾಲೀಕ ದೇವರಾಜು ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದರು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.