ಸುದ್ದಿ

ಚಾಲಕನಿಂದ ಲೈಂಗಿಕ ಕಿರುಕುಳ: 5 ಲಕ್ಷ ಪರಿಹಾರ ನೀಡಲು ಓಲಾಗೆ ಹೈಕೋರ್ಟ್ ಸೂಚನೆ

Share It

ಬೆಂಗಳೂರು: ಓಲಾ ಕ್ಯಾಬ್ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಗೆ ಪರಿಹಾರವಾಗಿ ₹5 ಲಕ್ಷ ರೂ. ನೀಡುವಂತೆ ಓಲಾ ಕ್ಯಾಬ್‌ನ ಮಾತೃ ಸಂಸ್ಥೆ ಎಎನ್‌ಐ ಟೆಕ್ನಾಲಜೀಸ್ ಪ್ರೈ. ಲಿ.ಗೆ ಹೈಕೋರ್ಟ್ ಆದೇಶಿಸಿದೆ.

ಪ್ರಕರಣ ಸಂಬಂಧ ನೀಡಿರುವ ದೂರಿನ ಕುರಿತು ತನಿಖೆ ನಡೆಸಲು ಕಂಪೆನಿಯ ಆಂತರಿಕ ದೂರು ಸಮಿತಿಗೆ ನಿರ್ದೇಶಿಸಬೇಕು ಎಂದು ಕೋರಿ ಸಂತ್ರಸ್ತೆ ಸಲ್ಲಿಸಿದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರ ಏಕಸದಸ್ಯ ಪೀಠ ಸೋಮವಾರ ಈ ಮೇಲಿನಂತೆ ಆದೇಶಿಸಿದೆ.

ಅಲ್ಲದೆ 2013ರ ಮಹಿಳೆಯರಿಗೆ ಲೈಂಗಿಕ ಕಿರುಕುಳ ನಿಷೇಧ, ತಡೆ ಮತ್ತು ಪರಿಹಾರ ಕಾಯ್ದೆಯ ವಿವಿಧ ಕಲಂಗಳ ಅನ್ವಯ ದೂರಿನ ಕುರಿತು ತನಿಖೆ ನಡೆಸುವಂತೆ ಕಂಪನಿಯ ಆಂತರಿಕ ದೂರುಗಳ ಸಮಿತಿಗೆ ನಿರ್ದೇಶನ ನೀಡಿದೆ. ಮಾತ್ರವಲ್ಲದೆ, 90 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದು ಆದೇಶಿಸಿದೆ. ಜತೆಗೆ ಅರ್ಜಿದಾರರಿಗೆ ವ್ಯಾಜ್ಯ ವೆಚ್ಚವಾಗಿ ಹೆಚ್ಚುವರಿ 50,000 ರೂ. ಪಾವತಿಸುವಂತೆ ಸೂಚಿಸಲಾಗಿದೆ.

ಅರ್ಜಿದಾರರು 2019ರಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರು ಮತ್ತು ಚಾಲಕನ ವಿರುದ್ಧ ಕ್ರಮ ಕೋರಿ ಎಎನ್‌ಐ ಟೆಕ್ನಾಲಜೀಸ್‌ಗೆ ನೀಡಿದ ದೂರನ್ನು ಸಂಸ್ಥೆ ಪರಿಗಣಿಸಲಿಲ್ಲ. ಆಂತರಿಕ ದೂರುಗಳ ಸಮಿತಿಯು ಈ ವಿಷಯದ ಬಗ್ಗೆ ವಿಚಾರಣೆ ನಡೆಸುವ ಅಧಿಕಾರವನ್ನು ಹೊಂದಿಲ್ಲ ಎಂದು ‘ಬಾಹ್ಯ ಕಾನೂನು ಸಲಹೆಗಾರ’ ಹೇಳಿದ್ದರು. ಇದನ್ನು ಪ್ರಶ್ನಿಸಿ ದೂರುದಾರೆ ಹೈಕೋರ್ಟ್ ಮೊರೆ ಹೋಗಿದ್ದರು.


Share It

You cannot copy content of this page