ಬೆಂಗಳೂರು:ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪದಡಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅಣ್ಣ ಗೋಪಾಲ ಜೋಶಿ, ಎಸ್.ಜಿ.ವಿಜಯಲಕ್ಷ್ಮಿ ಜೋಶಿ ಹಾಗೂ ಅಜಯ್ ಜೋಶಿ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಿರುವ ಹೈಕೋರ್ಟ್, ಕೂಡಲೇ ಬಿಡುಗಡೆ ಮಾಡುವಂತೆ ಆದೇಶಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ ₹2 ಕೋಟಿ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಮೇಲೆ ಗೋಪಾಲ ಜೋಶಿ ವಿರುದ್ಧ ದೂರು ದಾಖಲಾಗಿತ್ತು.
ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಗೋಪಾಲ ಜೋಶಿ ಅವರ ಪುತ್ರ ಅಜಯ್ ಜೋಶಿ ಹಾಗೂ ಎಸ್.ಜಿ.ವಿಜಯಲಕ್ಷ್ಮಿ ಜೋಶಿ ಸಲ್ಲಿಸಿದ್ದ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಡಿ.ಆರ್.ರವಿಶಂಕರ್, ಈ ಪ್ರಕರಣ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ (ಪಿಎಂಎಲ್‌ಎ) ಆರೋಪಕ್ಕೆ ಸಂಬಂಧಿಸಿದೆ. ಕಳೆದ ಮಾರ್ಚ್, ಏಪ್ರಿಲ್, ಮೇ ಹಾಗೂ ಆಗಸ್ಟ್‌ನಲ್ಲಿ ಘಟನೆ ನಡೆದಿವೆ ಎಂದು ಆಪಾದಿಸಲಾಗಿದೆ. ಅರ್ಜಿದಾರರು ಹಣ ಹಿಂತಿರುಗಿಸಲು ಒಪ್ಪಿದ್ದಾರೆ. ಆದರೂ ಇದೇ 17ರಂದು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ’ ಎಂದು ಆಕ್ಷೇಪಿಸಿದರು.