ಸುದ್ದಿ

ಸುಳ್ಳು ಮಾಹಿತಿ ನೀಡಿದ್ದ ಜನಪ್ರತಿನಿಧಿಗೆ ಜೈಲು ಶಿಕ್ಷೆ, ದಂಡ

Share It


ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ಆಸ್ತಿ ವಿವರಗಳಲ್ಲಿ ಸತ್ಯಾಂಶ ಮುಚ್ಚಿಟ್ಟ ಆರೋಪದಡಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ₹1 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಕರ್ನಾಟಕ ಲೋಕಾಯಕ್ತ ರಿಜಿಸ್ಟ್ರಾರ್‌ ದಾಖಲಿಸಿದ್ದ ಕ್ರಿಮಿನಲ್‌ ದೂರಿನ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ.

ಆರೋಪಿಯು ತಪ್ಪು ಮಾಹಿತಿ ನೀಡಿರುವುದು ಭಾರತೀಯ ದಂಡ ಸಂಹಿತೆ ಸೆಕ್ಷನ್‌ 177ರ ಅಡಿಯಲ್ಲಿ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ಅಪರಾಧಕ್ಕೆ ಮೂರು ತಿಂಗಳ ಜೈಲು ಶಿಕ್ಷೆ ಮತ್ತು 1 ಸಾವಿರ ರೂಪಾಯಿ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಎದುರಿಸುವಂತೆ ಆದೇಶದಲ್ಲಿ ತಿಳಿಸಿದೆ.

1989 ಮತ್ತು 2004ರಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಎರಡು ಅವಧಿಗೆ ಶಾಸಕರಾಗಿದ್ದ ಕಾಂಗ್ರೆಸ್‌ನ ಎ.ವಿ.ಉಮಾಪತಿ ಅವರು, 2004–2005 ಹಾಗೂ 2005–2006ರ ಆಸ್ತಿ ವಿವರದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಖಾಸಗಿ ದೂರು ದಾಖಲಿಸಿದ್ದರು. ಇದರ ಅನ್ವಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತ್ತು.


Share It

You cannot copy content of this page